ಚಂಡೀಗಢ: ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಲಿಯಾದವರನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದಿಂದ ಆಯೋಜಿಸಲಾಗಿದ್ದ ಶ್ರದ್ದಾಂಜಲಿ ಕಾರ್ಯಕ್ರಮ ಸಂಬಂಧ ಮೋದಿ ನೀಡಿದ್ದ ಹೇಳಿಕೆ ವಿರುದ್ಧ ಅಮರಿಂದರ್ ಸಿಂಗ್ ಕಿಡಿಕಾರಿದ್ದು, ಕೇಂದ್ರ ಸರಕಾರವು ಉದ್ದೇಶಪೂರ್ವಕವಾಗಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಬೆಂಬಲಿಸುವ ಬದಲು ಸಮಾನಾಂತರ ಕಾರ್ಯಕ್ರಮವನ್ನು ನಡೆಸಲು ಆಯ್ಕೆ ಮಾಡಿಕೊಂಡಿತ್ತು ಎಂದಿದ್ದಾರೆ.
ಐತಿಹಾಸಿಕ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಏರ್ಪಡಿಸುವ ಸಂಬಂಧ ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಪ್ರಧಾನಿ ಅವರನ್ನು ವೈಯಕ್ತಿಕವಾಗಿ ಸಂಪರ್ಕಿಸಿದ್ದೇನೆ. ಆದರೆ ಕೇಂದ್ರ ಸರ್ಕಾರ ಸೂಕ್ತವಾಗಿ ಪ್ರತಿಕ್ರಿಯಿಸಲೇ ಇಲ್ಲ ಎಂದು ಅಮರಿಂದರ್ ಆರೋಪಿಸಿದ್ದಾರೆ.
ಈ ವಿಚಾರದಲ್ಲಿ ಪ್ರಧಾನಿ ಮೋದಿ ರಾಜಕೀಯಕ್ಕಾಗಿ ಜನರಿಗೆ ತಪ್ಪು ಸಂದೇಶ ನೀಡುತ್ತಿರುವುದನ್ನು ಖಂಡಿಸುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದು,ಅವರೇ ಸಮಾರಂಭದಲ್ಲಿ ಪಾಲ್ಗೊಳ್ಳದೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅವಮಾನಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಕುಟುಂಬದ ಮೇಲಿನ ಭಕ್ತಿಯಿಂದಾಗಿ ಈ ಕಾರ್ಯಕ್ರಮವನ್ನು ಅಮರಿಂದರ್ ಸಿಂಗ್ ಬಹಿಷ್ಕರಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದರು.