ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ 7 ಗಂಟೆಗೆ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಭಾನುವಾರ ರಾಷ್ಟ್ರಪತಿ ಭವನ ಅಧಿಕೃತವಾಗಿ ತಿಳಿಸಿದೆ.
ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ಸಂಪುಟದ ನೂತನ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಶುಕ್ರವಾರ ಎನ್ ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾದ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದ ಪ್ರಧಾನಿ ಮೋದಿ ಅವರಿಗೆ, ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸಂಪುಟ ಸೇರುವ ಸದಸ್ಯರ ಮಾಹಿತಿ ನೀಡುವಂತೆ ಸೂಚಿಸಲಾಗಿತ್ತು.
ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ನಾಯಕರು ಸಾಕ್ಷಿಯಾಗಲಿದ್ದಾರೆ.