ಕುಂಬಳೆ: ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡು - ಮಂಜೇಶ್ವರ ತಾಲೂಕು ವ್ಯಾಪ್ತಿಯ ಅಂಗನವಾಡಿಯ ಮೇಲ್ವಿಚಾರಕಿ ಹುದ್ದೆಗಳನ್ನು ಕನ್ನಡ ಬಲ್ಲ ಉದ್ಯೋಗಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ತಿರುವನಂತಪುರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರನ್ನು ಕಾಸರಗೋಡು ಕನ್ನಡ ಹೋರಾಟ ಸಮಿತಿಯ ಪದಾಧಿಕಾರಿಗಳ ನಿಯೋಗ ಇತ್ತೀಚೆಗೆ ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಎರಡು ತಾಲೂಕುಗಳ 20 ಮೇಲ್ವಿಚಾರಿಕೆಯರ ಹುದ್ದೆಯನ್ನು ಮುಂದಿನ ದಿನಗಳಲ್ಲಿ ಸ್ಪೆಶಲ್ ರೂಲ್ ತಿದ್ದುಪಡಿಯ ಸಂದರ್ಭದಲ್ಲಿ ಡಿ-ಲಿಂಕ್ ಮಾಡುವ ಮೂಲಕ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದೆಂದು ನಿರ್ದೇಶಕರು ನಿಯೋಗಕ್ಕೆ ಈ ಸಂದರ್ಭ ಭರವಸೆ ನೀಡಿದ್ದಾರೆ.
ಕನ್ನಡ ಹೋರಾಟ ಸಮಿತಿಯ ಉಪಾಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು, ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಅಧ್ಯಕ್ಷ ರವೀಂದ್ರನಾಥ ಬಲ್ಲಾಳ್ ಮೊದಲಾದವರು ನಿಯೋಗದಲ್ಲಿದ್ದರು.
ಈ ಕುರಿತು ಕಾಸರಗೋಡು, ಮಂಜೇಶ್ವರ ತಾಲೂಕು ಕನ್ನಡ ಮಾಧ್ಯಮ ಅಂಗನವಾಡಿ ಅಧ್ಯಾಪಕಿಯರ ಅಸೋಸಿಯೇಶನ್ ರಾಜ್ಯ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯೂ ಸಚಿವರಿಗೆ ಮನವಿ ಸಲ್ಲಿಸಿದೆ.