ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯಗಳಲ್ಲಿ ವೈದ್ಯರು ತಮ್ಮ ಮುಷ್ಕರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಸೂಕ್ತ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಯ ಅಗತ್ಯ ಇಲ್ಲ. ಹೀಗಾಗಿ ಅದನ್ನು ಮುಂದಕ್ಕೆ ಹಾಕುತ್ತಿರುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ನ್ಯಾಯಮೂರ್ತಿ ದೀಪಕ್ ಗುಪ್ತಾ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠ, ಈಗ ಮುಗಿದಿರುವ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿ ನಾವು ಕೇಂದ್ರಕ್ಕೆ ನೋಟೀಸ್ ಜಾರಿ ಮಾಡುವುದಿಲ್ಲ. ಆದರೆ ವೈದ್ಯರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ವಿಚಾರದಲ್ಲಿ ತಾವು ಮುಕ್ತವಾಗಿರುವುದಾಗಿ ಹೇಳಿದೆ.
ವೈದ್ಯರು ಕಳೆದ ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದರಿಂದ ನಾವು ಮಂಗಳವಾರ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿದ್ದೆವು. ಆದರೆ ಈಗ ಮುಷ್ಕರ ಹಿಂಪಡೆಯಲಾಗಿದೆ. ಹೀಗಾಗಿ ಅರ್ಜಿಯ ತುರ್ತು ವಿಚಾರಣೆಯ ಅಗತ್ಯ ಇಲ್ಲ ಎಂದು ಕೋರ್ಟ್ ತಿಳಿಸಿದೆ.