ನವದೆಹಲಿ: 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಬಹುತೇಕ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ತಿಳಿಸಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.
ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಸಭೆಯಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಐದು ಪ್ರಮುಖ ಅಜೆಂಡಾಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಪ್ರತಿಪಕ್ಷಗಳು 'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಬೆಂಬಲ ಸೂಚಿಸಿವೆ ಎಂದರು.
'ಒಂದು ರಾಷ್ಟ್ರ ಒಂದು ಚುನಾವಣೆ' ರಾಜ್ಯಗಳಲ್ಲಿ ಜಾರಿಗೊಳಿಸಲು ಹೇಗೆ ಸಾಧ್ಯ ಎಂದು ಸಿಪಿಐ ಮತ್ತು ಸಿಪಿಐಎಂ ಮಾತ್ರ ಆಕ್ಷೇಪ ವ್ಯಕ್ತಪಡಿಸಿವೆ. ಉಳಿದ ಎಲ್ಲಾ ಪಕ್ಷಗಳು ಲೋಕಸಭೆ ಮತ್ತು ವಿಧಾಸಭೆಗೆ ಏಕಕಾಲಕ್ಕೆ ಚುವಾವಣೆ ನಡೆಸುವುದಕ್ಕೆ ಒಪ್ಪಿಗೆ ಸೂಚಿಸಿದ್ದು, ಈ ಕುರಿತು ಪ್ರಧಾನಿ ಮೋದಿ ಅವರು ಸಮಿತಿಯೊಂದನ್ನು ರಚಿಸಲಿದ್ದಾರೆ ಎಂದರು.
ಸರ್ವಪಕ್ಷ ಸಭೆಗೆ ಒಟ್ಟು 40 ಪಕ್ಷಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ 21 ಪಕ್ಷಗಳು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದವು ಎಂದು ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಹಲವು ಪ್ರಮುಖ ಪ್ರತಿಪಕ್ಷಗಳು ಈ ಸಭೆಯಿಂದ ದೂರ ಉಳಿದಿದ್ದವು.