ಡೆಹ್ರಾಡೂನ್: ಉತ್ತರಾಖಂಡ್ ಸರ್ಕಾರ, ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಜಾರಿಗೆ ತಂದಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಿದೆ. ಅಲ್ಲದೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ಅರ್ಹತೆ ನಿಗದಿ ಮಾಡಿದೆ.
ಮಂಗಳವಾರ 2016ರ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದ ಉತ್ತರಾಖಂಡ್ ಸರ್ಕಾರ, ನಿನ್ನೆ ಪ್ರತಿಪಕ್ಷಗಳ ವಿರೋಧದ ನಡುವೆಯೂ ಆ ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಉತ್ತರಾಖಂಡದಲ್ಲಿ ಕೆಲವೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮೊದಲು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವ ಸಾಧ್ಯತೆ ಇದೆ.
ಕುಟುಂಬ ಯೋಜನೆಗೆ ಉತ್ತೇಜನ ನೀಡುವುದಕ್ಕಾಗಿ ಮತ್ತು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿರ್ಧರಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮದನ್ ಕೌಶಿಕ್ ಅವರು ಹೇಳಿದ್ದಾರೆ.
ಪಂಚಾಯತಿ ರಾಜ್ ಕಾಯ್ದೆಯ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಅಭ್ಯರ್ಥಿ ಯಾವುದೇ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಅಲ್ಲದೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸ ಬಯಸುವ ಅಭ್ಯರ್ಥಿ ನಿರ್ದಿಷ್ಟ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.