ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸುವ ನಿರ್ಧಾರವನ್ನು ರಾಹುಲ್ ಗಾಂಧಿ ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದಿದ್ದು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಅಧ್ಯಕ್ಷರಾಗಿದ್ದಾರೆ ಇನ್ನು ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಚರ್ಚೆ ಬಳಿಕ ರಣದೀಪ್ ಅವರು ರಾಹುಲ್ ಗಾಂಧಿ ಅವರ ನಿರ್ಧಾರವನ್ನು ತಿಳಿಸಿದ್ದಾರೆ.
ಹಿರಿಯ ಮುಖಂಡ ಎಕೆ ಆಂಟನಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಜಾಖರ್ಂಡ್ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಿತು.
ಈ ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಹಮದ್ ಪಟೇಲ್, ಗುಲಾಂ ನಬಿ ಆಜಾದ್, ಪಿ ಚಿದಂಬರಂ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಜೈರಾಮ್ ರಮೇಶ್ ಮತ್ತು ಆನಂದ್ ಶರ್ಮಾ ಉಪಸ್ಥಿತರಿದ್ದರು.