ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸುವ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದಾರೆ.
ಅತ್ತ ಅಮಿತ್ ಶಾ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರು ತಿದ್ದುಪಡಿ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಎಷ್ಟೇ ಸಮಾಧಾನಿಸುವ ಪ್ರಯತ್ನ ಮಾಡಿದರೂ ಸದಸ್ಯರು ಸುಮ್ಮನಾಗಲಿಲ್ಲ.
ಆ ಮೂಲಕ ಜಮ್ಮು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆಗಳು ಮತ್ತು ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದ್ದು, ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕೇಂದ್ರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಈ ಹಿಂದೆ ಕಾಶ್ಮೀರಕ್ಕೆ ಸಂವಿಧಾನದಲ್ಲಿಆರ್ಟಿಕಲ್ 370, 35(ಂ) ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ.