ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ.
ಕೇಂದ್ರ ಸರ್ಕಾರ ಇತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ಧುಗೊಳಿಸಲು ತೀರ್ಮಾನವನ್ನು ತೆಗೆದುಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದರು. ಇದಕ್ಕೂ ಮೊದಲು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಲೋಕಸಭೆಯಲ್ಲಿ ಈ ಕುರಿತು ಇನ್ನು ಘೋಷಣೆ ಮಾಡಬೇಕಿದೆ.
ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ. ಅಂತೆಯೇ ಆರ್ಟಿಕಲ್ 370ಯ ರದ್ದಿನ ಕುರಿತು ಗೆಜೆಟ್ ನೋಟಿಫಿಕೇಷನ್ ಪ್ರಕ್ರಿಯೆಯೂ ಪೂರ್ಣವಾಗಿದೆ ಎಂದು ತಿಳಿದುಬಂದಿದೆ.
370 ಮತ್ತು 35ಎ ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ರಾಜ್ಯಸಭೆಯಲ್ಲಿ ಈ ಕುರಿತು ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 7ರಂದು ಈ ಕುರಿತು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಕಾನೂನು, ಸಂವಿಧಾನದ ಬದಲಾವಣೆ ತರಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಒಪ್ಪಿಗೆ ಪಡೆಯುವುದು 370ರ ನಿಯಮದಡಿ ಕಡ್ಡಾಯವಾಗಿತ್ತು. 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸಂವಿಧಾನ ರೂಪಿಸಿಕೊಳ್ಳುವ ಹಕ್ಕು ನೀಡಲಾಗಿತ್ತು. ಆದರೆ, ರಕ್ಷಣೆ, ಸಂಪರ್ಕ ಮತ್ತು ವಿದೇಶಾಂಗ ನೀತಿಗಳಿಗೆ ಈ ನಿಯಮ ಅನ್ವಯವಾಗುತ್ತಿರಲಿಲ್ಲ.