ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮತ್ತು ವಿಶೇಷ ಅಧಿಕಾರವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸ್ವಾಗತಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕೇಜ್ರಿವಾಲ್, ಜಮ್ಮು-ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಸರ್ಕಾರದ ಈ ನಿರ್ಧಾರದಿಂದ ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ವೇಗ ಹೆಚ್ಚಿಸಲಿ ಎಂದು ಹೇಳಿದ್ದಾರೆ.
ಪ್ರಮುಖ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್ ನಿಂದ ಬೇರ್ಪಡಿಸಿ ಎರಡನ್ನೂ ಕೇಂದ್ರಾಡಳಿತ ಪ್ರದೇಶವಾಗಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಲಡಾಖ್ ನಲ್ಲಿ ಯಾವುದೇ ವಿಧಾನಸಭೆಗೆ ಅವಕಾಶವಿರುವುದಿಲ್ಲ. ಗಡಿಯಾಚೆಗಿನ ನಿರಂತರ ಭಯೋತ್ಪಾದನೆಯ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.