ನವದೆಹಲಿ: ಕಾನೂನು ಬಾಹಿರ ಚಟುವಟಿಕೆ ತಿದ್ದುಪಡಿ ಕಾಯ್ದೆ 2019 (ಯುಎಪಿಎ) ಅಸಾಂವಿಧಾನಿಕವೆಂದು ವಿರೋಧ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದೆ.
ಯುಎಪಿಎ ಕಾಯ್ದೆಯು ಸಮಾನತೆಯ ಹಕ್ಕು, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯದ ಮೆಟ್ಟಿಲೇರಿರುವ ಖಾಸಗಿ ವ್ಯಕ್ತಿ ಸಾಜಲ್ ಅವಸ್ಥಿ ಅರ್ಜಿಯಲ್ಲಿ ತಿಳಿಸಿದ್ದಾರೆ
ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ 1967ರ ಪ್ರಕಾರ ಕಾನೂನುಬಾಹಿರ ಚಟುಚವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಮಾತ್ರ ನೋಟಿಸ್ ನೀಡಬಹುದಾಗಿದೆ ಆದರೆ ಯುಎಪಿಎ 2019 ರ ಸೆಕ್ಷನ್ 35 ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಪರಿಗಣಿಸುವ ವಿವರವಾದ ಆಧಾರಗಳನ್ನು ನಿರ್ದಿಷ್ಟಪಡಿಸಿಲ್ಲ ಎಂದು ಹೇಳಿದ್ದಾರೆ
ಯುಎಪಿಎ ಕಾಯ್ದೆ 1967 ರ ಹೊಸ ಅಥವಾ ತಿದ್ದುಪಡಿ ಮಾಡಿದ ಸೆಕ್ಷನ್ 35, ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕ ಎಂದು ವರ್ಗೀಕರಿಸಲು ಮತ್ತು ಅಂತಹ ವ್ಯಕ್ತಿಯ ಹೆಸರನ್ನು ಕಾಯ್ದೆಯ 4ನೇ ವೇಳಾಪಟ್ಟಿಯಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ ಎಂದು ಸಾಜಲ್ ಅವಸ್ಥಿ ಅರ್ಜಿಯಲ್ಲಿ ಹೇಳಿದ್ದಾರೆ.
ಈ ಅರ್ಜಿಯನ್ನು ಇಂದು ಪರಿಶೀಲನೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಹಾಗೂ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರಿದ್ದ ಪೀಠ ಇದೀಗ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.