ತಿರುವನಂತಪುರ: ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹಾಗೂ ಪ್ರತಿಪಕ್ಷಗಳ ನಾಯಕರು ಜಂಟಿಯಾಗಿ ಸೋಮವಾರ ಧರಣಿ ನಡೆಸಿದರು.
ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ್ ನೇತೃತ್ವದಲ್ಲಿ ಆಡಳಿತರೂಢ ಎಲ್ ಡಿಎಫ್ ಮತ್ತು ಪ್ರತಿಪಕ್ಷ ಯುಡಿಎಫ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಇಂದು ಬೆಳಗ್ಗೆ 10 ಗಂಟೆಯಿಂದ ಸತ್ಯಾಗ್ರಹ ನಡೆಸುತ್ತಿದ್ದು, ಪೌರತ್ವ ಕಾಯ್ದೆ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಬಿಜೆಪಿ ಹೊರತುಪಡಿಸಿ ಇತರೆ ಎಲ್ಲಾ ಪಕ್ಷಗಳ ನಾಯಕರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಪಿಣರಾಯ್ ನೇತೃತ್ವದ ಎಲ್ ಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ವಿರುದ್ಧ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿ ದಾಖಲೆ ನಿರ್ಮಿಸಿತು.
ಪೌರತ್ವ ಕಾಯ್ದೆಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಹಾಗೆಯೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ.