ನವದೆಹಲಿ: ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ನಿಯೋಗ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದೂರು ನೀಡಿವೆ.
ರಾಷ್ಟ್ರಪತಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಮೋದಿ ಸರ್ಕಾರ ಜನ ಒಪ್ಪಿಕೊಳ್ಳದ ಕಾನೂನನ್ನು ಜಾರಿಗೆ ತರುವ ಮೂಲಕ ಜನರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.ಸೋನಿಯಾ ಗಾಂಧಿ ನೇತೃತ್ವದ ನಿಯೋಗ ಇಂದು ಸಂಜೆ ರಾಷ್ಟ್ರಪತಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಅಲ್ಲದೆ ಪೌರತ್ವ ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾಚಾರ ಕುರಿತು ದೂರು ಸಹ ಸಲ್ಲಿಸಿದೆ.
ಹಿರಿಯ ಕಾಂಗ್ರೆಸ್ ನಾಯಕರಾದ ಎಕೆ ಆಂಟನಿ, ಡಿಎಂಕೆ ನಾಯಕ ಟಿಆರ್ ಬಾಲು ಮತ್ತು ಟಿಎಂಸಿ ನಾಯಕ ಡೆರೆಕ್ ಓ ಬ್ರಿಯಾನ್ ಅವರು ಸೇರಿದಂತೆ ಹಲವು ಪ್ರತಿಪಕ್ಷ ನಾಯಕರು ನಿಯೋಗದಲ್ಲಿದ್ದರು.