ವಿಶ್ವಸಂಸ್ಥೆ: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.
ಭಾರತ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಮಾಹಿತಿ ಇದೆ. ದೇಶದಲ್ಲಿ ವ್ಯಕ್ತವಾಗುವ ಪ್ರತಿಭಟನೆಯ ಬಗ್ಗೆಯೂ ಅರಿವಿದೆ. ಈ ಶಾಸನದ ಸಂಭವನೀಯ ಪರಿಣಾಮಗಳನ್ನು ವಿಶ್ಲೇಷಿಸುತ್ತಿರುವುದಾಗಿ ಹೇಳಿದ್ದಾರೆ.ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಈ ವಿವರಗಳನ್ನು ತಿಳಿಸಿದ್ದಾರೆ. ಈ ಕಾನೂನಿನ ಸ್ವರೂಪದ ಬಗ್ಗೆ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎಂದರು.ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದ ಭಾರತದ ಈಶಾನ್ಯ ರಾಜ್ಯಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಪೌರತ್ವ ಕಲ್ಪಿಸಲು ಹೊಸ ಕಾಯ್ದೆ ಅವಕಾಶ ನೀಡಲಿದೆ.