ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ರಾಜ್ಯಗಳು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ, ಪಂಜಾಬ್, ಕೇರಳ, ಮಧ್ಯ ಪ್ರದೇಶ ಮತ್ತು ಛತ್ತೀಗಢ್ ಸರ್ಕಾರಗಳು ಘೋಷಿಸಿದ ಬೆನ್ನಲ್ಲೇ ಅಧಿಕಾರಿಗಳು ಈ ಹೇಳಿಕೆ ನೀಡಿದ್ದಾರೆ.ಕೇಂದ್ರ ಸರ್ಕಾರ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೊಳಿಸಿದೆ ಮತ್ತು ಇದು ಕೇಂದ್ರ ಪಟ್ಟಿಯಲ್ಲಿರುವುದರಿಂದ ಇದನ್ನು ತಡೆಯುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಕಾಯ್ದೆಯನ್ನು ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಶಾಸನ ಮಾಡಿದ ನಂತರ ರಾಜ್ಯ ಸರ್ಕಾರಗಳಿಗೆ ಅದನ್ನು ತಿರಸ್ಕರಿಸುವ ಯಾವ ಅಧಿಕಾರವೂ ಇಲ್ಲ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ವ್ಯಕ್ತಿಗೆ ಪೌರತ್ವ ನೀಡುವುದು ಕೇಂದ್ರದ ವಿಶೇಷಾಧಿಕಾರವಾಗಿದೆ ಎಂದು ಹೇಳಿದ್ದಾರೆ.
ಮೊನ್ನೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ರಾಜ್ಯದಲ್ಲಿ ಸಂವಿಧಾನ ವಿರೋಧಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದರು. ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ನಾವು ಒಪ್ಪಿಕೊಳ್ಳುವುದಿಲ್ಲ. ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡಿದ್ದರೂ ಕೂಡ ನಾವು ಇಲ್ಲಿ ಮಸೂದೆ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.