ನವದೆಹಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ಜಾರಿ ವಿಳಂಬದ ಹಿನ್ನೆಲೆಯಲ್ಲಿ, ಮರಣ ದಂಡನೆ ಪ್ರಕರಣಗಳಲ್ಲಿ ಸಂತ್ರಸ್ಥರು ಹಾಗೂ ಸಮಾಜ ಕೇಂದ್ರಿತ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಆರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ.
ಕೇಂದ್ರ ಸರ್ಕಾರ ನಿನ್ನೆ ಸಲ್ಲಿಸಿರುವ ತನ್ನ ಅರ್ಜಿಯಲ್ಲಿ, ಅಪರಾಧಿಗಳ ಹಕ್ಕುಗಳಿಗೆ ಸಂಬಂಧಿಸಿದ 2014ರ ತೀರ್ಪಿಗೆ ಸಂಬಂಧಿಸಿದಂತೆ ಹೆಚ್ಚುವರಿ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ನ್ಯಾಯಪೀಠ, ಅಪರಾಧಿಗಳ ಹಕ್ಕುಗಳನ್ನು ಎತ್ತಿಹಿಡಿಯುವ ಈ ಹಿಂದಿನ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ತಿಳಿಸಿದೆ.
ಬಾಧಿತರು ಹಾಗೂ ಪ್ರಮುಖವಾಗಿ ಸಮಾಜ ಕೇಂದ್ರೀತ ಮತ್ತಷ್ಟು ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿರುವ ಆರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.