ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಮಹಾಮಾರಿಗೆ ಈ ವರೆಗೂ 934 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 29,435 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 62 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 934ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ 8,590 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಈಗಾಗಲೇ 1,282 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಜರಾತ್ ರಾಜ್ಯದಲ್ಲಿ 3,548 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 162 ಮಂದಿ ಬಲಿಯಾಗಿದ್ದಾರೆ. 394 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,108 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. 877 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರಂತೆ ದೇಶದಲ್ಲಿ ಈ ವರೆಗೂ 6,868 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈ ವರೆಗೂ 21,632 ಸೋಂಕಿನಿಂದ ಬಳಲುತ್ತಿದ್ದು, ಇವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.