ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೊರೋನಾ ವೈರಸ್ ಲಾಕ್ ಡೌನ್ ಹೇರಿರುವ ಕೇಂದ್ರ ಸರ್ಕಾರ ಮತ್ತೊಂದು ವಿನಾಯಿತಿ ನೀಡಿದ್ದು, ವಿವಿಧ ರಾಜ್ಯಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತವರಿಗೆ ತೆರಳಲು ಅನುಮತಿ ನೀಡಿದೆ.
ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳ ಸಂಚಾರಕ್ಕೆ ಗೃಹ ಸಚಿವಾಲಯ ಅನುಮತಿ ನೀಡಿದ್ದು, ಈ ಬಗ್ಗೆ ಇಂದು ನಿಯಮಾವಳಿಗಳನ್ನು ಬಿಡುಗಡೆ ಮಾಡಿದೆ. ಲಾಕ್‍ಡೌನ್ ಪರಿಣಾಮವಾಗಿ ದೇಶದ ವಿವಿಧ ಭಾಗಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಮನೆಗಳನ್ನು ತಲುಪಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವಂತೆ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಒಂದು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮತ್ತೊಂದು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಕ್ಕೆ ಹೋಗಲು ಬಯಸುವ ನಿರ್ದಿಷ್ಟ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಗುಂಪನ್ನು ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಪರಸ್ಪರ ಸಹಕಾರದ ಮೂಲಕ ಸುರಕ್ಷಿತವಾಗಿ ಮನೆ ತಲುಪಿಸುವ ಕಾರ್ಯ ಮಾಡಬೇಕು ಮತ್ತು ಸಂಕಷ್ಟದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡುವ ಮೂಲಕ ಅವರನ್ನು ಅವರ ಮಾತೃ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿಕೊಡುವ ವ್ಯವಸ್ಥೆಯನ್ನು ಮಾಡಲು ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆಯೂ ಗೃಹ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ವೈರಸ್ ಪ್ರಸರಣ ಹಿನ್ನಲೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು ಮತ್ತು ಪ್ರವಾಸಿಗರು ನಿರಾಶ್ರಿತರಾಗಿದ್ದರು. ಇದೀಗ ಕೇಂದ್ರ ಸರ್ಕಾರದ ಈ ನಡೆಯಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.