ನವದೆಹಲಿ: ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು ಮತ್ತು ಪ್ರವಾಸಿಗರನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬಸ್ ಮತ್ತು ರೈಲುಗಳ ಮೂಲಕ ಹೊತ್ತೊಯ್ಯಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.
ಕೆಲಸದ ಉದ್ದೇಶದಿಂದ ಒಂದು ಕಡೆ ನೆಲೆಸಿ, ಈಗ ತಮ್ಮ ಸ್ವಂತ ಸ್ಥಳಗಳಿಗೆ ತೆರಳಲು ಬಯಸುವ ಜನರಿಗೆ ಈ ಸೌಲಭ್ಯ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲಾಕ್ ಡೌನ್ ಜಾರಿಯಾಗುವ ಕೆಲವೇ ದಿನಗಳ ಮುನ್ನ ವಿವಿಧ ಸ್ಥಳಗಳಿಗೆ ತೆರಳಿ ಅಲ್ಲಿಯೇ ಸಿಲುಕಿದ್ದ ಜನರನ್ನು ಮಾತ್ರ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಕೊಂಡೊಯ್ಯಲು ಮಾತ್ರ ಅವಕಾಶ ಇದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಮಾರ್ಚ್ 25ರಂದು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಲಕ್ಷಾಂತರ ವಲಸೆ ಕಾರ್ಮಿಕರು, ಸಾವಿರಾರು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಯಾತ್ರಿಗಳು ವಿವಿಧ ಸ್ಥಳಗಳಲ್ಲಿ ಸಿಲುಕಿದ್ದರು.