ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಸಿದ ನಂತರ ದೇಶದಲ್ಲಿ ಸಾರ್ವಜನಿಕ ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿದ್ದು, ಸುಮಾರು ಒಂದೂವರೆ ತಿಂಗಳ ನಂತರ ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗುವ ಸಾಧ್ಯತೆ ಇದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಮತ್ತು ಕಾರು ಮಾಲೀಕರನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ ಅವರು, ಸಾರಿಗೆ ಮತ್ತು ಹೆದ್ದಾರಿ ಕಾರ್ಯಾಚರಣೆ ವೇಳೆ ಸಾಮಾಜಿಕ ಅಂತರ ಮತ್ತು ಕೈತೊಳೆಯುವುದು, ಸಾನಿಟೈಜಿಂಗ್ ಹಾಗೂ ಮಾಸ್ಕ್ ಧರಿಸುವುದು ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯ ಇದೆ ಎಂದಿದ್ದಾರೆ.
ಲಾಕ್ ಡೌನ್ ನಿಂದಾಗಿ ಸಾರಿಗೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ.