ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 4,77,023 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,77,023 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 9ರವರೆಗೂ 2,45,83,558 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ಒಂದೇ ದಿನ ದೇಶದಾದ್ಯಂತ 62,064 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 22,15,075ಕ್ಕೆ ತಲುಪಿದೆ. ಇನ್ನು ನಿನ್ನೆ ದಾಖಲೆಯ 1,007 ಮಂದಿ ಮಹಾಮಾರಿ ವೈರಸ್ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ.
22,15,075 ಮಂದಿ ಸೋಂಕಿತರ ಪೈಕಿ 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 6,34,945 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.