ದುಬೈ: ಕನ್ನಡಿಗ ಕೆ.ಎಲ್ ರಾಹುಲ್ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 2020ರ ಐಪಿಎಲ್ ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 97 ರನ್ ಗಳ ಅಂತರದಿಂದ ಮಣಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 206 ರನ್ ಸೇರಿಸಿತು. ಪಂಜಾಬ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ನಾಯಕ ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ ವಾಲ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು.
ಕರ್ನಾಟಕದ ಸ್ಟಾರ್ ಆಟಗಾರ ರಾಹುಲ್ 69 ಎಸೆತಗಳಲ್ಲಿ 14 ಬೌಂಡರಿ, 7 ಸಿಕ್ಸರ್ ಸಹಾಯದಿಂದ ಅಜೇಯ 132 ರನ್ ಬಾರಿಸಿದರು.
ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಓವರ್ ಗಳಲ್ಲಿ 109 ರನ್ ಗಳಿಸುವಷ್ಟರಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು.