ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 80 ವರ್ಷದ ಸ್ವಾಮಿ ಅಗ್ನಿವೇಶ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲ ದಿನಗಳಿಂದ ಗಂಭೀರವಾಗಿತ್ತು. ಹೀಗಾಗಿ ಕಳೆದ ಮಂಗಳವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಧಾರ್ಮಿಕ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಅಗ್ನಿವೇಶ್ ಅವರು ಸೆಪ್ಟೆಂಬರ್ 21, 1939ರಂದು ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಜನಿಸಿದ್ದರು. ಅವರು ಹರಿಯಾಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆರ್ಯ ಸಮಾಜದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.