ಮುಳ್ಳೇರಿಯ: ಇತ್ತೀಚಿಗೆ ಪರಮೈಕ್ಯರಾದ ಹಿರಿಯ ವಿದ್ವಾಂಸರೂ ಯಕ್ಷಗಾನ ಕಲಾವಿದರೂ ಆದ ಉಡುಪುಮೂಲೆ ಗೋಪಾಲಕೃಷ್ಣ ಭಟ್, ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ, ಪ್ರಸಿದ್ಧ ಯಕ್ಷಗಾನ ಕಲಾವಿದ ರಘುರಾಮ ಗೋಳಿಯಡ್ಕ ಅವರಿಗೆ ಕೋಟೂರು ಯಕ್ಷತೂಣೀರ ಸಂಪ್ರತಿಷ್ಠಾನದ ವತಿಯಿಂದ ನುಡಿನಮನ ಸಮರ್ಪಿಸಿ ಅವರ ದಿವ್ಯಾತ್ಮಕ್ಕೆ ಚಿರ ಶಾಂತಿ ದೊರೆಯುವಂತೆ ಪ್ರಾರ್ಥಿಸಲಾಯಿತು.
ಹಿರಿಯ ಯಕ್ಷಗಾನ ಕಲಾವಿದ ಅಡ್ಕ ಗೋಪಾಲಕೃಷ್ಣ ಭಟ್ಟರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅಗಲಿದ ಚೇತನಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಅಡ್ಕ ಗೋಪಾಲಕೃಷ್ಣ ಭಟ್ಟರು ನುಡಿ ನಮನದ ಮಾತುಗಳನ್ನಾಡಿದರು. ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ಕ್ಷೇತ್ರದ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ, ಪ್ರತಿಷ್ಠಾನದ ಗೌರವಾಧ್ಯಕ್ಷ ಗೋವಿಂದ ಬಳ್ಳಮೂಲೆ, ಪ್ರತಿಷ್ಠಾನದ ಅಧ್ಯಕ್ಷ ಸುಬ್ರಹ್ಮಣ್ಯ ಅಡ್ಕ, ಸಹಕಾರ್ಯದರ್ಶಿ ಡಾ. ಶಿವಕುಮಾರ್ ಅಡ್ಕ ನುಡಿನಮನಗಳನ್ನು ಅರ್ಪಿಸಿದರು.
ಕಾರ್ಯದರ್ಶಿ ಮುರಳಿಕೃಷ್ಣ ಸ್ಕಂದ ಸ್ವಾಗತಿಸಿ, ಕೋಶಾಧಿಕಾರಿ ಕೃಷ್ಣ ಭಟ್ ಅಡ್ಕ ವಂದಿಸಿದರು. ಕೋವಿದ್ ಮಾನದಂಡಗಳನ್ನು ಪಾಲಿಸಿಕೊಂಡು ಸಭೆ ನೆರವೇರಿತು.