ನವದೆಹಲಿ:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಶನಿವಾರ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ದುರ್ಬಲಗೊಂಡಿದ್ದ ನಿವಾರ್ ಚಂಡಮಾರುತ ಮತ್ತೆ ಬಲಗೊಳ್ಳುತ್ತಿದ್ದು, ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಡಿಸೆಂಬರ್ 1ರಿಂದ ಮತ್ತೆ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ನಿವಾರ್ ಚಂಡಮಾರುತದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಡಿ.1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನ.29ರವರೆಗೆ ಮಳೆಯಾಗಲಿದ್ದು, ನ.30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.
ಇದರ ಪ್ರಭಾವದಿಂದ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಹೇ, ಲಕ್ಷದ್ವೀಪ, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ರಾಯಲಸೀಮಗಳಲ್ಲಿ ಮಂಗಳವಾರ ಮತ್ತು ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.