ನವದೆಹಲಿ: ಎಲ್ಲ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೋಮವಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಈ ಸಂಬಂಧ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುರ್ಖಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಆಸ್ಪತ್ರೆಗಳಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 14 ಜನ ಪ್ರಾಣ ಕಳೆದುಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಭಲ್ಲಾ ಅವರು ಪತ್ರದಲ್ಲಿ ಇದನ್ನೂ ಉಲ್ಲೇಖಿಸಿದ್ದು, ಇಡೀ ಜಗತ್ತು ಕೋವಿಡ್ ರೋಗದ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಈ ರೀತಿಯಾಗಿ ಜನರ ಪ್ರಾಣಹಾನಿ ಆಗಬಾರದು. ಸಾಕಷ್ಟು ಮುನ್ನೆಚ್ಚರಿಕೆಯನ್ನು ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.
ಎಲ್ಲ ಆಸ್ಪತ್ರೆ, ನರ್ಸಿಂಗ್ ಹೋಮ್ಗಳಲ್ಲಿ ತೆಗೆದುಕೊಂಡಿರುವ ಅಗ್ನಿಸುರಕ್ಷಾ ಕ್ರಮಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಆ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂಬುದನ್ನು ಖಾತರಿಗೊಳಿಸಬೇಕು. ಅಲ್ಲದೆ ತೆಗೆದುಕೊಂಡ ಕ್ರಮಗಳ ವಿವರವನ್ನು ಸಚಿವಾಲಯಕ್ಕೆ ಕಳುಹಿಸಬೇಕು ಎಂದು ಭಲ್ಲಾ ಸೂಚಿಸಿದ್ದಾರೆ.