ನವದೆಹಲಿ: ತಮ್ಮ ಆಡಳಿತವು ಕೊನೆಗೊಳ್ಳಲಿದೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹತಾಶರಾಗಿದ್ದಾರೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ಪಶ್ಚಿಮ ಬಂಗಾಳದಲ್ಲಿ ನಡೆದ ದಾಳಿಯ ಬಗ್ಗೆ ಪ್ರಜ್ಞಾ ಠಾಕೂರ್ ಭಾನುವಾರ ಪ್ರತಿಕ್ರಿಯಿಸಿದ್ದಾರೆ.
ಮುಂದಿನ ವರ್ಷ(2021) ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದ್ದು, 'ಹಿಂದೂ ರಾಜ್' ಮೇಲುಗೈ ಸಾಧಿಸಲಿದೆ ಎಂದು ಪ್ರಜ್ಞಾ ಹೇಳಿದ್ದಾರೆ.
'ಮಮತಾ ಬ್ಯಾನರ್ಜಿ ಅವರು ಹತಾಶಗೊಂಡಿದ್ದಾರೆ. ಕಾರಣ, ತಮ್ಮ ಆಡಳಿತವು ಕೊನೆಗೊಳ್ಳಲಿದೆ ಎಂಬುದನ್ನು ಅವರು ಅರಿತುಕೊಂಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಪಶ್ಚಿಮ ಬಂಗಾಳದಲ್ಲಿ ಹಿಂದೂ ರಾಜ್ ಅಸ್ತಿತ್ವಕ್ಕೆ ಬರಲಿದೆ' ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಗುರುವಾರ ಕಲ್ಲು ತೂರಾಟ ನಡೆದಿತ್ತು.
ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಕಾರಿನ ಮೇಲೂ ದಾಳಿ ಮಾಡಲಾಗಿದೆ ಎಂದು ಬಿಜೆಪಿ ಆರೋಪ ಮಾಡಿತ್ತು.