ನವದೆಹಲಿ: ದೇಶದಲ್ಲಿ ಸತತ 2ನೇ ದಿನವೂ 19 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,222 ಹೊಸ ಕೇಸ್ ಪತ್ತೆಯಾಗಿದ್ದು, 228 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
228 ಮಂದಿ ಸಾವನ್ನಪ್ಪುವುದರೊಂದಿಗೆ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,50,798ಕ್ಕೆ ಏರಿಕೆಯಾಗಿದೆ.
ಈ ನಡುವೆ ನಿನ್ನೆ ಒಂದೇ ದಿನ 19,253 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಒಟ್ಟು ಗುಣಮುಖರ ಸಂಖ್ಯೆ 1,00,56,651 ಕ್ಕೆ ತಲುಪಿದೆ.
ಹೊಸ ಪ್ರಕರಣಗಳನ್ನು ಮೀರಿ ಚೇತರಿಕೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಮತ್ತು ದೈನಂದಿನ ಸಾವಿನ ಪ್ರಮಾಣ ಇಳಿಕೆಯಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,24,190ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಒಂದೇ ದಿನ 9.16 ಲಕ್ಷ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.