ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತದಲ್ಲಿ ಕೋವಿಡ್-19 ಲಸಿಕೆ ಪಡೆಯಲಿದ್ದಾರೆ ಎಂದು ವರದಿಯಾಗಿದೆ.
ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಕೋವಿಡ್-19 ಲಸಿಕೆ ತೆಗೆದುಕೊಳ್ಳಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಜನವರಿ 16ರಂದು ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಸೇನಾನಿಗಳು ಸೇರಿದಂತೆ ಮೂರು ಕೋಟಿ ಮಂದಿಗೆ ಲಸಿಕೆ ವಿತರಿಸುವ ಯೋಜನೆ ಹೊಂದಲಾಗಿದೆ.
ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೂ ಮತ್ತು ಇತರೆ ಆರೋಗ್ಯ ಸಮಸ್ಯೆ ಉಳ್ಳವರೂ ವೈದ್ಯರ ಸಲಹೆಯಂತೆ ಕೋವಿಡ್-19 ಲಸಿಕೆ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ.
50 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಸಂಸದರು ಮತ್ತು ಶಾಸಕರು ಲಸಿಕೆ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿದ 'ಕೋವಿಶೀಲ್ಡ್' ಲಸಿಕೆಯನ್ನು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. 'ಕೋವ್ಯಾಕ್ಸಿನ್' ಲಸಿಕೆಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ.