ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳ ರದ್ದತಿ ಕೋರಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವಿನ 9ನೇ ಸುತ್ತಿನ ಮಾತುಕತೆ ಕೂಡ ಯಾವುದೇ ಫಲಿತಾಂಶವಿಲ್ಲದೆ ಶುಕ್ರವಾರ ಅಂತ್ಯಗೊಂಡಿದೆ.
ಮುಂದಿನ ಸುತ್ತಿನ ಮಾತುಕತೆ ಜನವರಿ 19 ರಂದು ಮಧ್ಯಾಹ್ನ 12.00 ಗಂಟೆಗೆ ನಿಗದಿಯಾಗಿದೆ. ಇಂದಿನ ಸಭೆಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ಸಚಿವ ಸೋಮ್ ಪ್ರಕಾಶ್ ಅವರು ಸುಮಾರು 40 ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಭಾಗವಹಿಸಿದ್ದರು. ಮೂಲಗಳ ಪ್ರಕಾರ, ರೈತರು ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಮೂಲ ಬೇಡಿಕೆಗೆ ಪಟ್ಟು ಹಿಡಿದಿದ್ದಾರೆ ಮತ್ತು ತಿದ್ದುಪಡಿಗಳನ್ನು ನೀಡುವ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನರೇಂದ್ರ ಸಿಂಗ್ ತೋಮರ್, ರೈತ ಸಂಘಟನೆಗಳ ಮುಖಂಡರೊಂದಿಗೆ ಇಂದು ನಡೆಸಿದ ಮಾತುಕತೆ ನಿರ್ಣಾಯಕವಲ್ಲ. 19ರಂದು ಮತ್ತೆ ಸಭೆ ಸೇರಿ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆ ಎಂದರು.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗ ಸೇರಿದಂತೆ ದೇಶದ ಹಲವು ಕಡೆಗಳ ಸಾವಿರಾರು ರೈತರು ಕಳೆದ 50 ದಿನಗಳಿಂದ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
ಸಭೆಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೊಮರ್, ರೈತರ ಪ್ರತಿಭಟನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ. ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿ ಮುಂದೆ ಸರ್ಕಾರ ತನ್ನ ನಿಲುವನ್ನು ತಿಳಿಸಲಿದೆ. ರೈತರ ಜೊತೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದರು.