ನವದೆಹಲಿ: ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ತಮ್ಮ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದ್ದಾರೆ.
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಣ್ಣಾ ಹಜಾರೆಯವರು ಮಹಾರಾಷ್ಟ್ರದ ಅಹ್ಮದ್‌ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ.30ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಘೋಷಿಸಿದ್ದರು.
ಶುಕ್ರವಾರ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಣ್ಣಾ ಹಜಾರೆಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರವು ಕೆಲವು ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆ ಹೋರಾಟವನ್ನು ಕೈಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ನವೆಂಬರ್.26ರಿಂದಲೂ ಕೇಂದ್ರ ಸರ್ಕಾರದ ಹೊಸ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ.