ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರಿಂಕೋರ್ಟ್‌ಗೆ ರಿಷಭ್ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಿಂದ ಜನ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ರೈತರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಅವರು ಕೋರಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ 42 ಸಂಘಟನೆಗಳನ್ನು ಅವರು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.
ನೂತನ ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ರೈತರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಜ. 11ರಂದು ನಡೆಯಲಿದೆ.
ನವೆಂಬರ್ 26ರಿಂದ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಈ ಪ್ರತಿಭಟನೆ, ಈ ಹಿಂದೆ ಸಿಎಎ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಉಲ್ಲಂಘನೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಿರ್ದಿಷ್ಟಾವಧಿಯ ಪ್ರತಿಭಟನೆ ನಡೆಸದೆ ನಿಗದಿತ ಸ್ಥಳಗಳಲ್ಲಿ ನಡೆಸಬೇಕು ಎಂಬುದಾಗಿ ತೀರ್ಪು ನೀಡಲಾಗಿತ್ತು ಎಂದು ಅರ್ಜಿದಾರರು ವಿವರಿಸಿದ್ದಾರೆ.
'ಭಾರಿ ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದರಿಂದ ಕೋವಿಡ್-19 ಪ್ರಸರಣವಾಗುವ ಆತಂಕವೂ ಇದೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಈ ಪ್ರತಿಭಟನೆಯಿಂದ ಪ್ರತಿನಿತ್ಯ 3,500 ಕೋಟಿ ನಷ್ಟವುಂಟಾಗುತ್ತಿದೆ' ಎಂದು ಅವರು ಕೋರ್ಟ್‌ನ ಗಮನ ಸೆಳೆದಿದ್ದಾರೆ.