ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ.
ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ. ಇದು ಭಾರತಕ್ಕೆ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಜನರಿಗೆ ಮಹತ್ವದ ದಿನವಾಗಿದೆ ಎಂದು ಹೇಳಿದ್ದಾರೆ.
ದಶಕಗಳ ಹಿಂದಿನ ಭಾರತದ ಪ್ರಗತಿಯ ರೇಟಿಂಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಈಗಂತೂ ಭಾರತ ನಿಧಾನಗತಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಇತ್ತೀಚಿನ ಕೆಲವು ವರ್ಷಗಳಲ್ಲಿ ಭಾರತವು ತನ್ನ ವೇಗ, ಪ್ರಮಾಣ ತಮತು ಅಭಿವೃದ್ಧಿ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ.
2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಇದಾಗಿದ್ದು, ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ.
ಸಮಾರಂಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.