ನವದೆಹಲಿ: ಈ ವರ್ಷ ಭಾರತದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಬ್ರಿಟನ್‌ನಲ್ಲಿ ಕೊರೊನಾವೈರಸ್ ಹೊರ ರೂಪಾಂತರ ಹರಡುತ್ತಿರುವುದರಿಂದ ಈಗಾಗಲೇ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಹ ಘೋಷಿಸಲಾಗಿದ್ದು, ಈ ಕಾರಣ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡುವ ಮೂಲಕ ಭಾರತ ಭೇಟಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ನಿನ್ನೆ ರಾತ್ರಿ ಬ್ರಿಟನ್‌ನಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು, ಇಂತಹ ಸಮಯದಲ್ಲಿ ಅವರು ಬ್ರಿಟನ್‌ನಲ್ಲಿ ಉಳಿಯುವುದು ಅವಶ್ಯಕ ಎಂದು ಅವರು ಪ್ರಧಾನಿ ಮೋದಿ ಅವರಿಗೆ ತಿಳಿಸಿದರು.
ಆದಾಗ್ಯೂ, ಈ ವರ್ಷದ 2021 ರ ಮೊದಲಾರ್ಧದಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. ಈ ವರ್ಷ ಬ್ರಿಟನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೇರ್ಪಡೆಗೊಳ್ಳುವ ಭರವಸೆ ಇದೆ ಎಂದು ಅವರು ಹೇಳಿದರು.
2021 ರ ಗಣರಾಜ್ಯೋತ್ಸವದಂದು ಭಾರತವು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಬೋರಿಸ್ ಜಾನ್ಸನ್ ಭಾರತದ ಆಹ್ವಾನವನ್ನು ಸ್ವೀಕರಿಸಿದ್ದಾರೆ ಮತ್ತು ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಡಿಸೆಂಬರ್‌ನಲ್ಲಿ ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಮಾಹಿತಿ ನೀಡಿದರು.
ಆದರೆ ಇಂಗ್ಲೆಂಡ್‌ನಲ್ಲಿ ಹೊಸ ಕೊರೊನಾ ಸೋಂಕು ವೇಗವಾಗಿ ದೇಶದಲ್ಲಿ ಹರಡಿದ್ದು, ತುರ್ತು ಪರಿಸ್ಥಿತಿಯನ್ನು ಸೃಷ್ಟಿಸಿದ್ದು, ಅಂತಿಮ ಕ್ಷಣದಲ್ಲಿ ಬ್ರಿಟನ್ ಪ್ರಧಾನಿ ಭಾರತ ಪ್ರವಾಸ ರದ್ದುಗೊಳಿಸಿದ್ದಾರೆ.