ನವದೆಹಲಿ: ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಎರಡನೇ ಹಂತದಲ್ಲಿ ಮುಂಚೂಣಿ ಕೊರೋನಾ ವಾರಿಯರ್ಸ್ ಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಈಗ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮಾರ್ಚ್ 1 ರಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಮೂರನೇ ಹಂತದ ಕೋವಿಡ್ ಲಸಿಕೆ ಅಭಿಯಾನವನ್ನು ಘೋಷಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾವಡೇಕರ್ ಅವರು, "ಲಸಿಕೆಯನ್ನು ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಶುಲ್ಕ ಪಡೆದು ಲಸಿಕೆ ನೀಡುವುದಕ್ಕೆ ಅವಕಾಶ ನೀಡುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದರು.
ದೇಶದಲ್ಲಿ ಜನವರಿ 16 ರಿಂದ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ಫೆಬ್ರವರಿ 3 ರಿಂದ ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.