ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಕೆ ಲಭ್ಯತೆ ಕುರಿತು ನಿರ್ಣಯ ಕೈಗೊಂಡಿದೆ. ಅಲ್ಲದೆ ದರ ಕೂಡ ನಿಗದಿ ಮಾಡಿದೆ.
ಖಾಸಗಿ ಆಸ್ಪತ್ರೆಗಳಲ್ಲೂ ಇನ್ನು ಮುಂದೆ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಪ್ರತೀ ಡೋಸ್ ಗೆ 250 ರೂಗಳನ್ನು ಕೇಂದ್ರ ಸರ್ಕಾರ ದರ ನಿಗದಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾರತವು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮಾರ್ಚ್ 1 ರಿಂದ ಲಸಿಕೆ ಹಾಕಲು ಸಿದ್ಧತೆ ನಡೆಸಿದೆ. ಅದರಂತೆ ದೇಶದ ಸುಮಾರು 27 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡುವ, ಜಗತ್ತಿನ ಅತಿ ದೊಡ್ಡ ಲಸಿಕಾ ಅಭಿಯಾನ ಆರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ:
ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲಿಚ್ಛಿಸುವವರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲಿಚ್ಛಿಸುವವರು ಪ್ರತೀ ಡೋಸ್ ಗೆ 250 ರೂ ನೀಡಿ ಲಸಿಕೆ ಪಡೆಯಬೇಕಾಗಿದೆ. ಮೂಲಗಳ ಪ್ರಕಾರ ಲಸಿಕೆ ದರ 150 ರೂ ಇದ್ದು 100 ರೂ ಸೇವಾ ಶುಲ್ಕ ಸೇರಿ ಒಟ್ಟು 250 ರೂಗಳನ್ನು ದರವಾಗಿ ಕೇಂದ್ರ ಸರ್ಕಾರ ನಿಗದಿ ಮಾಡಿದೆ. ಈ ದರ ಸರ್ಕಾರದ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.