ತಿರುವನಂತಪುರ: ಕೇರಳದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ಟ್ಯೂಷನ್ ನ ಬರೊಬ್ಬರಿ 90 ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಲಪ್ಪುರಂನ 2 ಶಾಲೆಗಳಲ್ಲಿನ 192 ವಿದ್ಯಾರ್ಥಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಈ 192 ವಿದ್ಯಾರ್ಥಿಗಳ ಪೈಕಿ 90 ವಿದ್ಯಾರ್ಥಿಗಳು ಒಂದೇ ಟ್ಯೂಷನ್ ನ ವಿದ್ಯಾರ್ಥಿಗಳು ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ
ಇದೀಗ ಟ್ಯೂಷನ್ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗಿದ್ದು, ಆ ಟ್ಯೂಷನ್ ಕೇಂದ್ರಕ್ಕೆ ತೆರಳುತ್ತಿದ್ದ ಉಳಿದ ವಿದ್ಯಾರ್ಥಿಗಳಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅಲ್ಲದೆ ಟ್ಯೂಷನ್ ಗೆ ಬರುತ್ತಿದ್ದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದು ಶಿಕ್ಷಣ ಅಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆ ಟ್ಯೂಷನ್ ಕೇಂದ್ರಕ್ಕೆ ತೆರಳುತ್ತಿದ್ದ ಉಳಿದ ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆ ಇಂದು ನಡೆಯಲಿದ್ದು, ಈ ಟ್ಯೂಷನ್ ಕೇಂದ್ರಕ್ಕೆ ಸೇರಿದ ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಪರೀಕ್ಷೆ ಬಳಿಕ ಮಾಹಿತಿ ಲಭ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿ ಕೋವಿಡ್ ಪ್ರಮಾಣ ಪತ್ರ ಕಡ್ಡಾಯ:
ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಕರ್ನಾಟಕದ 5 ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಮೊದಲಿನ ಕೋವಿಡ್ ನೆಗೆಟೀವ್ ಪ್ರಮಾಣ ಪತ್ರ ತರಬೇಕು. ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.