ಬೆಂಗಳೂರು: ಕೇರಳ ರಾಜ್ಯದಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕ ಸಂಚಾರ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಕಾಸರಗೋಡಿನ ವಕೀಲ ಬಿ.ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.
ಅರ್ಜಿಯಲ್ಲಿ ಏನಿದೆ: ಕೊರೋನ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್‍ಡೌನ್ ಅನ್ನು ಹಂತಹಂತವಾಗಿ ತೆರವು ಮಾಡಿರುವ ಕೇಂದ್ರ ಸರಕಾರ, ಜ.27ರಂದು ಅನ್‍ಲಾಕ್ 4.0 ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಲ್ಲಿ ಸಾರ್ವಜನಿಕ ಅಂತರರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಹೀಗಿದ್ದರೂ ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇದು ಕೇಂದ್ರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.