ಉತ್ತರ ಖಂಡ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಉತ್ತರ್ ಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಹಿಂದಿಯಲ್ಲಿ ಸರಣಿ ಟ್ವೀಟ್ ಪ್ರಕಟಿಸಿರುವ ಅಮಿತ್ ಶಾ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಪ್ರವಾಹ ಪೀಡಿತ ಜನರ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿ ಪಡೆಯನ್ನು ದೆಹಲಿಯಿಂದ ಏರ್ ಲಿಫ್ಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರಾ ಖಂಡದಲ್ಲಿನ ನೈಸರ್ಗಿಕ ವಿಪತ್ತು ಕುರಿತಂತೆ ಅಲ್ಲಿನ ಮುಖ್ಯಮಂತ್ರಿ, ಐಟಿಬಿಪಿ ಹಾಗೂ ಎನ್ ಡಿಆರ್ ಎಫ್ ಡಿಜಿ ಜೊತೆಗೆ ಮಾತುಕತೆ ನಡೆಸಿದ್ದು, ಸಂಬಂಧಿತ ಎಲ್ಲಾ ಅಧಿಕಾರಿಗಳು ಜನರ ರಕ್ಷಣೆಯಲ್ಲಿ ನಿರತರಾಗಿದ್ದಾರೆ. ದೆೇವಭೂಮಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಅವರು ಹೇಳಿದ್ದಾರೆ.
ಉತ್ತರಾಖಂಡದಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಕೇಂದ್ರ ಸರ್ಕಾರ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.