ತಿರುವನಂತಪುರ: ಕೇರಳದಲ್ಲಿ ಶಬರಿಮಲೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಂಭೀರವಲ್ಲದ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆ ನಡೆಯುವ ಮುನ್ನ ಕೈಗೊಂಡಿರುವ ಈ ನಿರ್ಧಾರವನ್ನು ಕಾಂಗ್ರೆಸ್ ಸ್ವಾಗತಿಸಿದೆ.
2018-19ರಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ ಸುಮಾರು ಎರಡು ಸಾವಿರ ಪ್ರಕರಣಗಳು ದಾಖಲಾಗಿದ್ದವು. ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೇರಳದ ಪ್ರಮುಖ ಸಂಘಟನೆಯಾದ ನಯ್ಯರ್ ಸರ್ವಿಸ್ ಸೊಸೈಟಿ (ಎನ್‌ಎಸ್‌ಎಸ್) ಆಗ್ರಹಿಸಿತ್ತು.