ನವದೆಹಲಿ: ಭ್ರಷ್ಟಾಚಾರ ಪ್ರಕರಣವೊಂದರಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರನ್ನು ಮುಕ್ತಗೊಳಿಸುವುದರ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ, ಏಪ್ರಿಲ್ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇದಕ್ಕೂ ಮುನ್ನ, ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು 'ನಾನು ಮತ್ತೊಂದು ಪ್ರಕರಣದಲ್ಲಿ ಇನ್ನೊಂದು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದೆ. ಹಾಗಾಗಿ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು' ಎಂದು ಪೀಠಕ್ಕೆ ಮನವಿ ಮಾಡಿದರು.
ಸಾಲಿಸಿಟರ್ ಜನರಲ್ ಅವರ ಮನವಿಯನ್ನು ಪುರಸ್ಕರಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿತು.
1996ರಲ್ಲಿ ಪಿಣರಾಯಿ ವಿಜಯನ್ ಅವರು ಇಂಧನ ಸಚಿವರಾಗಿದ್ದಾಗ, ಕೆನಡಾ ಮೂಲದ ಎಸ್‌ಎನ್‌ಸಿ-ಲಾವಲಿನ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡುವ ವಿಷಯದಲ್ಲಿ ಸರ್ಕಾರಕ್ಕೆ 374.50 ಕೋಟಿ ನಷ್ಟ ಮಾಡಿದ್ದಾರೆ ಹಾಗೂ ಗುತ್ತಿಗೆ ನೀಡುವ ವಿಷಯದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.