ನವದೆಹಲಿ: ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಅಬ್ಬರಿಸುತ್ತಿದ್ದು, ದೇಶದಲ್ಲಿಂದು ಬರೋಬ್ಬರಿ 24,882 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
24,882 ಹೊಸ ಪ್ರಕರಣಗಳೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,13,33,728ಕ್ಕೆ ಏರಿಕೆಯಾಗಿದೆ. ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,58,446ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,13,33,728 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 19,957 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,09,73,260ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,02,022 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ ಒಂದೇ ದಿನ 8,40,635 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 22,58,39,273 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 2,82,18,457 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.