ನವದೆಹಲಿ: ಆತಂಕಕಾರಿ ಪ್ರಮಾಣದಲ್ಲಿ ಹೊಸ ಕೊರೋನಾ ಕೇಸು ಪತ್ತೆಯಾಗುವ ಬೆಳವಣಿಗೆ ದೇಶದಲ್ಲಿ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 40,953 ಪ್ರಕರಣಗಳು ದಾಖಲಾಗಿವೆ. ಇದು ಈ ವರ್ಷದ ಈ ವರೆಗಿನ ಹಾಗೂ ಕಳೆದ 111 ದಿನಗಳ ಸರ್ವಾಧಿಕ ದೈನಂದಿನ ಸಂಖ್ಯೆಯಾಗಿದೆ.
ಇದೇ ವೇಳೆ ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್, ಛತ್ತೀಸ್ಗಢಗಳಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.80 ರಷ್ಟು ಕೇಸುಗಳು ಈ ರಾಜ್ಯಗಳಲ್ಲೇ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಫೆಬ್ರವರಿ 15 ರಂದು ಕೇವಲ 1.35 ಲಕ್ಷಕ್ಕೆ ಇಳಿದಿದ್ದ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಇದೀಗ 2,88,394ಕ್ಕೆ ಏರಿಕೆಯಾಗಿದೆ. ಸತತ 10 ದಿನಗಳಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತಲ್ಲೇ ಇದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.
ಒಂದೇ ದಿನ 40,953 ಮಂದಿ ಸೋಂಕಿತರು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,15,55,284ಕ್ಕೆ ಏರಿಕೆಯಾಗಿದೆ. ಜೊತೆಗೆ 24 ಗಂಟೆಗಳಲ್ಲಿ ಬರೋಬ್ಬರಿ 188 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 1,59,558ಕ್ಕೆ ಏರಿಕೆಯಾಗಿದೆ
ಈ ನಡುವೆ ಒಟ್ಟಾರೆ 1,15,55,284 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 23,653 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,11,07,332 ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಂದೇ ದಿನ 10,60,971 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,24,31,517 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 4,20,63,392 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.