ನವದೆಹಲಿ: ಭಾರತದಲ್ಲಿ 17ನೇ ದಿನವೂ ಕೊರೋನಾ ಅಬ್ಬರ ಮುಂದುವರೆಸಿದ್ದು, ಶನಿವಾರ ಒಂದೇ ದಿನ ದಾಖಲೆಯ 62,258 ಹೊಸ ಪ್ರಕರಣ ದೃಢವಾಗವೆ. ಇದು ಕಳೆದ ವರ್ಷ ಅ.18ರ ನಂತರದ ಗರಿಷ್ಠ ಸಂಖ್ಯೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ.
ಹೊಸ ಪ್ರಕರಣಗಳ ಪೈಕಿ ಶೇ.80ರಷ್ಟು ಕೇಸು ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಛತ್ತೀಸ್ಗಢ, ಗುಜರಾತ್ ರಾಜ್ಯಗಳಿಂದ ದಾಖಲಾಗಿವೆ. ಇನ್ನು ಮಹಾರಾಷ್ಟ್ರ ಕೇರಳ ಮತ್ತು ಪಂಜಾಬ್ ರಾಜ್ಯಗಳಲ್ಲಿಯೇ ಶೇ.73.64ರಷ್ಟು ಸಕ್ರಿಯ ಸೋಂಕಿತರಿದ್ದಾರೆಂದು ತಿಳಿದುಬಂದಿದೆ.
ಇದೇ ವೇಳೆ ಶನಿವಾರ ಒಂದೇ ದಿನ ಬರೋಬ್ಬರಿ 291 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 1,61,240ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
1,19,08,910 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 30,386 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,12,95,023ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,52,647ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಒಂದೇ ದಿನ 11,64,915 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,97,69,553 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.