ನವದೆಹಲಿ: ಕಳೆದ ಎರಡು-ಮೂರು ವಾರಗಳಿಂದ ಕೊರೋನಾ ವೈರಸ್ ದೇಶದಲ್ಲಿ ಏರಿಕೆಯಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿದ್ದಾರೆ.
ಸೋಮವಾರ ಬೆಳಗ್ಗೆಯ ಹೊತ್ತಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಕೋಟಿಯ 20 ಲಕ್ಷದ 39 ಸಾವಿರದ 644ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 68 ಸಾವಿರದ 020 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 291 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಒಂದೇ ದಿನ ಬರೋಬ್ಬರಿ 68 ಸಾವಿರದ 020 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,61,843ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
1,20,39,644 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 32,231 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,55,993ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,21,808ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯ ಪ್ರದೇಶ, ಪಂಜಾಬ್, ತಮಿಳು ನಾಡು, ಗುಜರಾತ್, ಕೇರಳ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಈ ರಾಜ್ಯಗಳಲ್ಲಿ ಶೇಕಡಾ 84.5ರಷ್ಟು ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿವೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಪಂಜಾಬ್ ಮತ್ತು ಛತ್ತೀಸ್ ಗಢಗಳಲ್ಲಿ ಶೇಕಡಾ 80ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗುತ್ತಿವೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶ ತಿಳಿಸಿದೆ.
ಈವರೆಗೂ ದೇಶದಲ್ಲಿ 24,18,64,161 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಈ ವರ್ಷದ ಆರಂಭದಲ್ಲಿ ಅಂದರೆ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಹಿರಿಯ ನಾಗರಿಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,05,30,435 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.