ನವದೆಹಲಿ: ಅಧಿಕ 'ನೋಟಾ(NOTA)' ಚಲಾವಣೆಯಾಗುವ ಮತ ಕೇತ್ರಗಳಲ್ಲಿ ಚುನಾವಣೆ ರದ್ದುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠ, ಕೇಂದ್ರ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.
ಈ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ವಕೀಲ ಅಶ್ವಿನ್‌ಕುಮಾರ್ ದುಬೆ ಅವರ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲೆ ಮೇನಕಾ ಗುರುಸ್ವಾಮಿ ಅವರು ವಾದಿಸುತ್ತಿದ್ದಾರೆ.
ಅರ್ಜಿಯಲ್ಲಿ, 'ನೋಟಾ ಮತಗಳು ಹೆಚ್ಚು ಚಲಾವಣೆಯಾದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು, ಮರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು' ಎಂದು ಕೋರಿದ್ದಾರೆ.
'ಗರಿಷ್ಠ ನೋಟಾ ಮತಗಳನ್ನು ಪಡೆದರೆ, ಆ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಿ, ಆರು ತಿಂಗಳೊಳಗೆ ಹೊಸ ಚುನಾವಣೆ ನಡೆಸುವುದಾಗಿ ನ್ಯಾಯಾಲಯ ಘೋಷಿಸಬೇಕು. ಈ ಹಿಂದಿನ ಚುನಾವಣೆಯಲ್ಲಿ ಮತದಾರರಿಂದ ತಿರಸ್ಕರಿಸಲ್ಪಟ್ಟ ಅಭ್ಯರ್ಥಿಗಳು ಹೊಸ ಚುನಾವಣೆಯಲ್ಲಿ ಭಾಗವಹಿಸಲು ಅನುಮತಿ ನೀಡಬಾರದು' ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.