ನವದೆಹಲಿ: ಡಿಜಿಟಲ್ ವೇದಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರದ ಯಾವುದೇ ನಿಯಮಾವಳಿಗಳಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಗಳು ಕೇವಲ ಮಾರ್ಗದರ್ಶಿ ಸೂತ್ರಗಳಾಗಿವೆ ಮತ್ತು ಡಿಜಿಟಲ್ ವೇದಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್.ಎಸ್. ರೆಡ್ಡಿ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.
ವೆಬ್ ಸರಣಿ 'ತಾಂಡವ್' ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅಮೆಜಾನ್ ಪ್ರೈಮ್ ವಿಡಿಯೊದ ಭಾರತದ ಮುಖ್ಯಸ್ಥ ಅಪರ್ಣಾ ಪುರೋಹಿತ್ ಅವರನ್ನು ಬಂಧಿಸದಂತೆ ನ್ಯಾಯಾಲಯ ರಕ್ಷಣೆಯನ್ನು ಸಹ ಇದೇ ಸಂದರ್ಭದಲ್ಲಿ ನೀಡಿದೆ.
ಜತೆಗೆ, ಪುರೋಹಿತ್ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ.
ಸರ್ಕಾರವು ಈ ವಿಷಯದ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. ಯಾವುದೇ ಶಾಸನ ರಚಿಸುವ ಕುರಿತು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.