ನವದೆಹಲಿ: ಭಾರತೀಯ ಸೇನೆಯ ಉನ್ನತ ಮಟ್ಟದ ನಾಯಕತ್ವದ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಸೈನಿಕರಿಗೂ ಅವಕಾಶ ನೀಡಲಾಗಿದೆ.
ಇದೇ ಶನಿವಾರ ಗುಜರಾತ್ ನ ಕೆವಾಡಿಯಾದಲ್ಲಿ ಈ ಸಮಾವೇಶ ಆಯೋಜನೆಗೊಂಡಿದ್ದು, ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಭಾರತೀಯ ಸೇನೆಯ ಉನ್ನತಾಧಿಕಾರಿಗಳು ಪಾಲ್ಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಸಾಮಾವೇಶದಲ್ಲಿ ಪಾಲ್ಗೊಳ್ಳಲು ಸೈನಿಕರು ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿಗಳಿಗೆ (ಜೆಸಿಒ) ಅವಕಾಶ ನೀಡಲಾಗಿದೆ.
ಮೂರು ದಿನಗಳ ಸಮಾವೇಶದಲ್ಲಿ ಸೈನಿಕರು ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಸಮಾವೇಶ ಆರಂಭಿಕ ದಿನದ ನಿರ್ಧಿಷ್ಠ ಕಲಾಪದಲ್ಲಿ ಮಾತ್ರ ಪಾಲ್ಗೊಳ್ಳಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಹತ್ವದ ಸಮಾವೇಶದಲ್ಲಿ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ, ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಸಶಸ್ತ್ರ ಪಡೆಗಳು ಭಾಗವಹಿಸಲಿವೆ.
ಈ ಸಮಾವೇಶದ ಅಂತಿಮ ದಿನದಂದು ಅಂದರೆ ಶನಿವಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. ಅಂದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಪಾಲ್ಗೊಳ್ಳಲ್ಲಿದ್ದಾರೆ.
ಲಡಾಖ್ ನಲ್ಲಿ ಸೇನಾ ಹಿಂತೆಗೆತ ಮತ್ತು ಗಡಿಯಲ್ಲಿ ಶಾಂತಿ ಸ್ಥಾಪನೆ ಕುರಿತಂತೆ ಚರ್ಚೆಗಳು ನಡೆಯುತ್ತಿರುವಾಗಲೇ ಈ ರಕ್ಷಣಾ ಸಮಾವೇಶ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.