ನವದೆಹಲಿ: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಶನಿವಾರ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳ ಉಳಿದಿರುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಮೂಲಕ ಇಂದಿನಿಂದ ಪೂರ್ಣ ಪ್ರಮಾಣದ ಪ್ರಚಾರವನ್ನು ಆರಂಭಿಸುತ್ತಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನಿವಾಸದಲ್ಲಿ ನಡೆದ ಎರಡು ದಿನಗಳ ಸರಣಿ ಸಭೆಯಲ್ಲಿ ಎಲ್ಲಾ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಂತಿಮಗೊಳಿಸಿದೆ. ಮುಂದಿನ ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದ್ದು,
ಕೊನೆ ಕ್ಷಣದಲ್ಲಿ ಪ್ರತಿಪಕ್ಷಗಳು ಕಣಕ್ಕಿಳಿಸುವ ಅಭ್ಯರ್ಥಿಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಪ್ರಮುಖ ಮುಖಂಡರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಜೆ. ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು. ಶುಕ್ರವಾರ ಮಧ್ಯರಾತ್ರಿಯವರೆಗೂ ಕೇರಳದ ಮುಖಂಡರೊಂದಿಗೆ ಜೆ. ಪಿ. ನಡ್ಡಾ ಸಭೆ ನಡೆಸಿದ್ದಾರೆ.
ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಆ ಸಮುದಾಯದ ಕಾಂಗ್ರೆಸ್ ಪಕ್ಷದಿಂದ ಬರುವಂತಹ ಮುಖಂಡರನ್ನು ಸ್ವಾಗತಿಸಲು ಒಲವು ತೋರಿದೆ. ಅಂತವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಅಸ್ಸಾಂ, ಪಶ್ಟಿಮ ಬಂಗಾಳದ ಪ್ರಮುಖರೊಂದಿಗೂ ವರಿಷ್ಠರು ಸಭೆ ನಡೆಸಿದರು. ಪಶ್ಚಿಮ ಬಂಗಾಳದಲ್ಲಿ ಆರು ಹಂತಗಳಲ್ಲಿ ನಡೆಯಲಿರುವ ಚುನಾವಣೆಗಾಗಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ವರಿಷ್ಠರು ಅಂತಿಮಗೊಳಿಸಿರುವುದಾಗಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.