ತಿರುವನಂತಪುರಂ: ಮಹಾರಾಷ್ಟ್ರ ಮತ್ತು ಪಂಜಾಬ್‌ನಿಂದ ಕೊರೋನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇರಳ ಸರ್ಕಾರ, ಇತರೆ ರಾಜ್ಯ ಮತ್ತು ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದೆ.
ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಪ್ರಯಾಣದ ಇತಿಹಾಸ ಹೊಂದಿರುವವರು ಕಡ್ಡಾಯವಾಗಿ ಕೊರೋನಾ ಪರೀಕ್ಷೆಗೆ ಒಳಗಾಗಬೇಕು. ಒಂದು ವೇಳೆ ನೆಗಟಿವ್ ಬಂದರೂ ರಾಜ್ಯಕ್ಕೆ ಆಗಮಿಸಿದ 14 ದಿನಗಳಲ್ಲಿ ಮತ್ತೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಕೇರಳ ಸರ್ಕಾರ ಹೇಳಿದೆ.
ರೋಗಿಗಳ ಸಂಪರ್ಕ ಪಟ್ಟಿಯಲ್ಲಿರುವವರು ಕೊರೋನಾ ರೋಗಲಕ್ಷಣಗಳನ್ನು ಹೊಂದಿದ್ದರೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆಯ ನಂತರ ಕೊರೋನಾ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುವ ನಿರೀಕ್ಷೆ ಇದ್ದು, ಶೇಕಡಾ 70 ರಷ್ಟು ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಸರ್ಕಾರವನ್ನು ಒತ್ತಾಯಿಸುತ್ತಿದೆ.